ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ನಡೀತಿದ್ದ ಸಿಎಂ ಕುರ್ಚಿ ಬದಲಾವಣೆಯ ತೀವ್ರ ಹಗ್ಗಜಗ್ಗಾಟ ಹಾಗೂ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸರ್ಕಾರದ ಅಧಿಕೃತ ಮೂಲಗಳು ಈಗ ಅಧಿಕೃತವಾಗಿ ಖಚಿತಪಡಿಸಿವೆ.
ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಸರ್ಕಾರದ ಒಳಗೆ ನಡೀತಿದ್ದ ಆಂತರಿಕ ಅಧಿಕಾರ ಹಂಚಿಕೆಯ ಹೋರಾಟ ಮತ್ತು ಸಸ್ಪೆನ್ಸ್‌ಗೆ ಈಗ ಕ್ಲೈಮ್ಯಾಕ್ಸ್ ಸಿಕ್ಕಿದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಈ ಮಹತ್ವದ ಬಿಗ್ ಅಪ್ಡೇಟ್ ಹೊರಬಿದ್ದಿದೆ.
ರಾಜಭವನದ ಗ್ಲಾಸ್ ಹೌಸ್‌ನಲ್ಲಿ ಅದ್ಧೂರಿ ಕಾರ್ಯಕ್ರಮ
ಕನಕಪುರದ ಬಂಡೆ ಎಂದೇ ಖ್ಯಾತರಾಗಿರುವ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂನ್ 3 ರಂದು ಅದ್ಧೂರಿಯಾಗಿ ಜರುಗಲಿದೆ. ಬೆಂಗಳೂರಿನ ರಾಜಭವನ ಆವರಣದಲ್ಲಿರುವ ಪ್ರತಿಷ್ಠಿತ ಲೋಕ ಭವನದ ಗ್ಲಾಸ್ ಹೌಸ್‌ನಲ್ಲಿ (Lok Bhavan Glass House) ಈ ಹೈ-ಪ್ರೊಫೈಲ್ ಕಾರ್ಯಕ್ರಮ ನಡೆಯಲಿದೆ.
ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ದೆಹಲಿಯಿಂದ ಎಐಸಿಸಿ (AICC) ಮತ್ತು ಕಾಂಗ್ರೆಸ್ ಹೈಕಮಾಂಡ್‌ನ ಪ್ರಮುಖ ರಾಷ್ಟ್ರೀಯ ನಾಯಕರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರ ಜೊತೆಗೆ ರಾಜ್ಯ ಸಚಿವ ಸಂಪುಟದ ಸಹೋದ್ಯೋಗಿಗಳು, ವಿವಿಧ ಪಕ್ಷಗಳ ಪ್ರಮುಖ ರಾಜಕಾರಣಿಗಳು, ಗಣ್ಯರು ಹಾಗೂ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಲಿರುವ ಸಹಸ್ರಾರು ಸಂಖ್ಯೆಯ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಅದ್ಧೂರಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ರಾಜಭವನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಹಾಗೂ ಸಿದ್ಧತೆಗಳು ಬಿರುಸಿನಿಂದ ಸಾಗಿವೆ.
ಹೈಕಮಾಂಡ್ ಸೂತ್ರದಂತೆ ಅಧಿಕಾರ ಹಸ್ತಾಂತರ
64 ವರ್ಷದ ಪ್ರಭಾವಿ ಮತ್ತು ಸಂಘಟನಾ ಚತುರ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದಿರುವುದು ಅಷ್ಟು ಸುಲಭವಾಗಿ ಆಗಿದ್ದಲ್ಲ. ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ನವದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದರು. ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿದ್ದರು.
ಅಧಿಕಾರ ಹಂಚಿಕೆಯ ಸೂತ್ರ: 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಸಿಎಂ ಹುದ್ದೆಗಾಗಿ ಭಾರಿ ಪೈಪೋಟಿ ನಡೆದಿತ್ತು. ಆಗ ದೆಹಲಿ ನಾಯಕರು 'ಅಧಿಕಾರ ಹಂಚಿಕೆ ಸೂತ್ರ' (Leadership Arrangement) ಒಂದನ್ನು ಸಿದ್ಧಪಡಿಸಿದ್ದರು. ಅದರ ಪ್ರಕಾರ ಮೊದಲ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಿದ್ದರೆ, ಈಗ ನಿಗದಿತ ಅವಧಿಯ ನಂತರ ಒಪ್ಪಂದದಂತೆಯೇ ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಪಟ್ಟ ಕಟ್ಟುತ್ತಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
ಕಾರ್ಯಕರ್ತರಲ್ಲಿ ಹಬ್ಬದ ವಾತಾವರಣ
ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಜೂನ್ 3ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅನ್ನೋ ಸುದ್ದಿ ಹೊರಬೀಳುತ್ತಿದ್ದಂತೆ, ರಾಜ್ಯಾದ್ಯಂತ ಇರೋ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ರಾತ್ರಿ ಹಗಲು ಶ್ರಮಿಸಿದ 'ಟ್ರಬಲ್ ಶೂಟರ್'ಗೆ ಕೊನೆಗೂ ಹೈಕಮಾಂಡ್ ನ್ಯಾಯ ಒದಗಿಸಿದೆ ಎಂದು ಕಾರ್ಯಕರ್ತರು ಖುಷಿ ಪಡುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಡಿಕೆಶಿ ಅವರ ನೇತೃತ್ವದಲ್ಲಿ ಕರ್ನಾಟಕ ಸರ್ಕಾರ ಯಾವ ರೀತಿ ಮುನ್ನಡೆಯಲಿದೆ, ಸಚಿವ ಸಂಪುಟದಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿದೆ ಮತ್ತು ಹೊಸ ಸಿಎಂ ಅವರ ಮುಂದಿನ ಆಡಳಿತಾತ್ಮಕ ಹೆಜ್ಜೆಗಳು ಹೇಗಿರಲಿವೆ ಅನ್ನೋದು ಇಡೀ ರಾಜ್ಯದ ಕುತೂಹಲಕ್ಕೆ ಕಾರಣವಾಗಿದೆ. ವಿಪಕ್ಷಗಳ ಟೀಕೆ ಹಾಗೂ ಪಕ್ಷದೊಳಗಿನ ಆಂತರಿಕ ಸಮತೋಲನವನ್ನು ಕಾಯ್ದುಕೊಳ್ಳುವುದು ಹೊಸ ಮುಖ್ಯಮಂತ್ರಿಗೆ ಇರುವ ಮೊದಲ ಸವಾಲಾಗಿದೆ.