Feb 16, 2026 Languages : ಕನ್ನಡ | English

ಮನೆ ಮುಂದೆ ಕಸಗುಡುತ್ತಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳ ದಾಳಿ!!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಸರಗಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮನೆ ಮುಂದೆ ಕಸಗುಡಿಸುತ್ತಿದ್ದ ಮಹಿಳೆಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ. ದಾಳಿ ಬಳಿಕ ಮಹಿಳೆ ಕುಸಿದು ಬಿದ್ದಿದ್ದು, ಆಕೆ ಮೃತಪಟ್ಟಿದ್ದಾಳೆ.

ಮಾದನಾಯಕನಹಳ್ಳಿ ಪೊಲೀಸ್ ವ್ಯಾಪ್ತಿಯಲ್ಲಿ ಭಯಾನಕ ಘಟನೆ
ಮಾದನಾಯಕನಹಳ್ಳಿ ಪೊಲೀಸ್ ವ್ಯಾಪ್ತಿಯಲ್ಲಿ ಭಯಾನಕ ಘಟನೆ

ಮೃತ ಮಹಿಳೆ ಜ್ಯೋತಿ (45) ಎಂದು ಗುರುತಿಸಲಾಗಿದ್ದು, ಮುಂಜಾನೆ ಸುಮಾರು 5.30ರ ವೇಳೆಗೆ ಜ್ಯೋತಿ ಅವರು ಮನೆಯ ಮುಂದೆ ಕಸಗುಡಿಸಲು ಹೊರಬಂದಿದ್ದರು. ಇದೇ ವೇಳೆ ಅಪರಿಚಿತರು ಬಂದು ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಕತ್ತಿನಲ್ಲಿದ್ದ ಮಾಂಗಲ್ಯ ಸರ ಮತ್ತು ಕಿವಿಯ ಓಲೆಗಳನ್ನು ದುಷ್ಕರ್ಮಿಗಳು ಕಿತ್ತುಕೊಂಡಿದ್ದಾರೆ. ದಾಳಿಯ ತೀವ್ರತೆಗೆ ಜ್ಯೋತಿ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ಬೆಳಿಗ್ಗೆ ಸುಮಾರು 6.30ರ ವೇಳೆಗೆ ಮನೆಯವರು ಹೊರಗೆ ಬಂದಾಗ ಜ್ಯೋತಿ ಬಿದ್ದಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ನಂತರ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಜ್ಯೋತಿಯ ಕೈ ಮೇಲೆ ಗಾಯದ ಗುರುತುಗಳು ಕಂಡುಬಂದಿದ್ದು, ಮುಖದಲ್ಲಿ ನೊರೆ ಕೂಡ ಕಾಣಿಸಿಕೊಂಡಿತ್ತು. ದುಷ್ಕರ್ಮಿಗಳು ಸ್ಪ್ರೇ ಹೊಡೆದ ಪರಿಣಾಮ ಉಸಿರುಗಟ್ಟಿ ಅವರು ಸಾವನ್ನಪ್ಪಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದಿ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದಲ್ಲಿ ದುಃಖದ ವಾತಾವರಣ ಆವರಿಸಿದ್ದು, ಮನೆಯ ಬಾಗಿಲ ಬಳಿಯೇ ದಾಳಿ ನಡೆಸಿ ಚಿನ್ನ ಕಸಿದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಈ ಭಾಗದಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರ ತನಿಖೆ ಅಗತ್ಯವಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

Latest News