ಯಾದಗಿರಿ ಜಿಲ್ಲೆಯ ಶಹಾಪುರ ಭಾಗದಲ್ಲಿ ಪ್ರಭಾವ ಹೊಂದಿದ್ದ ಮಲ್ಲಿಕಾರ್ಜುನ ಮುತ್ಯಾ ಎಂಬ ಸ್ವಯಂಘೋಷಿತ ದೇವಮಾನವನ ವಿರುದ್ಧ ಈಗ ಕಾನೂನು ಕುಣಿಕೆ ಬಿಗಿಯಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂ*ಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಅವರ ಮೇಲೆ ಪೋಕ್ಸೋ ಕಾಯಿದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಘಟನೆಯು ಜಿಲ್ಲೆಯಾದ್ಯಂತ ಭಾರಿ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಮಲ್ಲಿಕಾರ್ಜುನ ಮುತ್ಯಾ ಅವರ ವಿಡಿಯೋವೊಂದು ಭಾರಿ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಮುತ್ಯಾ ಅವರು ಅಪ್ರಾಪ್ತ ಬಾಲಕಿಯೊಬ್ಬಳನ್ನು ಮಡಿಲಲ್ಲಿ ಕುರಿಸಿಕೊಂಡು ಆಕೆಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ವರ್ತಿಸುತ್ತಿರುವುದು ಕಂಡುಬಂದಿದೆ. ಬಾಲಕಿಯನ್ನ ಎಳೆದಾಡುವುದು, ಆಕೆಯ ಮೈಕೈ ಸವರುವುದು ಮತ್ತು ಅನುಚಿತವಾಗಿ ಮುತ್ತಿಡುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಇದನ್ನ ನೋಡಿದ ಸಾರ್ವಜನಿಕರು ಮತ್ತು ಮಕ್ಕಳ ಹಕ್ಕುಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತ್ತು. ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸುಂಬೆ ಅವರು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದು ತನಿಖೆ ನಡೆಸಲು ಸೂಚಿಸಿದ್ದರು. ಇದರ ಬೆನ್ನಲ್ಲೇ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ತನಿಖೆ ನಡೆಸಿ, ಬಾಲಕಿಯ ಪೋಷಕರನ್ನು ವಿಚಾರಣೆಗೆ ಒಳಪಡಿಸಿತ್ತು. ಅಂತಿಮವಾಗಿ, ಶಹಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ಉಮಾಪತಿ ಅವರು ಗೋಗಿ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ.
ಪೊಲೀಸರು ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೋ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಯು ನಾಪತ್ತೆಯಾಗಿದ್ದು, ಹೈದರಾಬಾದ್‌ನಲ್ಲಿ ತಲೆಮರೆಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಆತನ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ. ಇತ್ತ ಮುತ್ಯಾ ಅವರು ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ ತಾವು ತನಿಖೆಗೆ ಸಹಕರಿಸುವುದಾಗಿ ಮತ್ತು ಭಕ್ತರು ಆತಂಕ ಪಡಬಾರದು ಎಂದು ಹೇಳಿಕೊಂಡಿದ್ದಾರೆ.
ಇನ್ನೊಂದೆಡೆ, ಮಲ್ಲಿಕಾರ್ಜುನ ಮುತ್ಯಾ ಅವರ ಕುಟುಂಬಸ್ಥರು ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಬಾಲಕಿಯು ನಮ್ಮ ಮಠದ ಭಕ್ತರ ಮಗಳು ಮತ್ತು ನಮ್ಮ ಹತ್ತಿರದ ಸಂಬಂಧಿ. ಬಾಲಕಿಯ ಮೇಲೆ ತೋರಿದ ಪ್ರೀತಿಯನ್ನು ಸಾರ್ವಜನಿಕರು ತಪ್ಪಾಗಿ ಅರ್ಥೈಸಿದ್ದಾರೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ವಿಡಿಯೋದಲ್ಲಿ ಬಾಲಕಿಗೆ ತೀವ್ರ ಕಿರಿಕಿರಿಯಾಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದ್ದು, ತನಿಖೆಯ ನಂತರವಷ್ಟೇ ಸತ್ಯಾಸತ್ಯತೆ ಹೊರಬರಬೇಕಿದೆ. ಧರ್ಮ ಮತ್ತು ಭಕ್ತಿಯ ಹೆಸರಿನಲ್ಲಿ ಮಕ್ಕಳ ಮೇಲೆ ನಡೆಯುವ ಯಾವುದೇ ರೀತಿಯ ದೌರ್ಜನ್ಯಗಳನ್ನ ಸಮಾಜ ಸಹಿಸುವುದಿಲ್ಲ. ಇಂತಹ ಘಟನೆಗಳು ಜಾಗೃತಿಯ ಅಗತ್ಯವನ್ನು ಎತ್ತಿ ತೋರಿಸುತ್ತವೆ.